ಯಲಹಂಕ ನ್ಯೂ ಟೌನ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಚರಣ್ ಅವರೊಂದಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಕಿರಣ್ ಎಂಬಾತನೇ ₹30 ಲಕ್ಷಕ್ಕೆ ಸುಪಾರಿ ನೀಡಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ಸಂಪೂರ್ಣ ಹಿನ್ನೆಲೆ ಇಲ್ಲಿದೆ. ಬೆಂಗಳೂರು, ನವೆಂಬರ್ 16: ಬೆಂಗಳೂರಿನ ಯಲಹಂಕ ನ್ಯೂ ಟೌನ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ (35) ಅವರನ್ನು ಹಾಡಹಗಲೇ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಉದ್ಯಮಿ ಚರಣ್ ಹತ್ಯೆಗೆ ಬರೋಬ್ಬರಿ ₹30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.