ಗಂಗಾವತಿ: ಕ್ರೀಡಾ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಾಗಲಿದ್ದು, ಕ್ರಿಯಾಶೀಲತೆ ರೂಢಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಕೊಪ್ಪಳ ವಿವಿ ಕುಲಪತಿ ಪ್ರೊ.ಟಿ.ವಿ.ವಾರುಣಿ ಹೇಳಿದರು. ಶ್ರೀರಾಮನಗರದ ಸಿಎನ್ಆರ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಅಂತರ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಭಾಗದ ಕಾಲೇಜಿನಲ್ಲೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿರುವುದು ಪ್ರಶಂಸನೀಯ. ವಿಜ್ಞಾನ ಕೋರ್ಸ್ ಆರಂಭಿಸುವ ಮೂಲಕ ಗ್ರಾಮೀಣ ಭಾಗದ ಉನ್ನತ ವಿದ್ಯಾಭ್ಯಾಸಕ್ಕೆ ಆಡಳಿತ ಮಂಡಳಿ ಸಹಕಾರಿಯಾಗಿದೆ. ಕ್ರೀಡಾಸ್ಫೂರ್ತಿಯಿಂದ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆ ಮಾಡಬೇಕು ಎಂದರು.