ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಗೌರವಧನ ಹೆಚ್ಚಳದ ಭರವಸೆ ಈಡೇರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮದೇ ಪ್ರಣಾಳಿಕೆಯ ಭರವಸೆ ಮತ್ತು ತಮ್ಮ ಹಿಂದಿನ ಮುಖ್ಯಮಂತ್ರಿಗಳ ಘೋಷಣೆಯನ್ನು ಈಡೇರಿಸುವ ನೈತಿಕ ಜವಾಬ್ದಾರಿಯನ್ನು ಸರ್ಕಾರ ಈಡೇರಿಸಲಿ ಎಂದವರು ಆಗ್ರಹಿಸಿದ್ದಾರೆ. ಬೆಂಗಳೂರು, ನವೆಂಬರ್ 19: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ತಮ್ಮ ಮಕ್ಕಳ ಜೊತೆ ಇಡೀ ರಾತ್ರಿ ಧರಣಿ ನಡೆಸುತ್ತಿದ್ದಾರೆ.