ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಮೊದಲ ‘ನಾಗರಿಕ ಸಂವಾದ ವೇದಿಕೆ’ ಸಭೆಯಲ್ಲಿ ಭಾಗವಹಿಸಲು ನವದೆಹಲಿಗೆ ಆಗಮಿಸಿರುವ ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಸೂದ್ ಮಲಿಕ್ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಸುಧಾರಿಸಲಿವೆ ಎಂಬ ಆಶಾವಾದ ವ್ಯಕ್ತಪಡಿಸಿದ್ದಾರೆ. ವೇಗವಾಗಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಸನ್ನಿವೇಶವು ಪ್ರಾದೇಶಿಕ ಸಹಕಾರವನ್ನು ಹೆಚ್ಚಿಸಲು ಉತ್ತಮ ಅವಕಾಶವನ್ನು ಒದಗಿಸಿದೆ ಎಂದು ಅವರು ಹೇಳಿದ್ದಾರೆ. 2023ರ ಮೇ ತಿಂಗಳಲ್ಲಿ ಗೋವಾದಲ್ಲಿ ನಡೆದ ಎಸ್ಸಿಒ ಸಭೆಯಲ್ಲಿ ಅಂದಿನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾಗವಹಿಸಿದ ನಂತರ, ಭಾರತಕ್ಕೆ ಭೇಟಿ ನೀಡುತ್ತಿರುವ ಪಾಕಿಸ್ತಾನದ ಮೊದಲ ಕೇಂದ್ರ ಸಚಿವರು ಮುಸಾದಿಕ್ ಮಲಿಕ್ ಆಗಿದ್ದಾರೆ.