ಬೆಳಗಾವಿ ಜಿಲ್ಲೆಯ ಘೋಡಗೇರಿ ಗ್ರಾಮದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಬಾಕಿ ಹಣ ಕೇಳಿದ್ದಕ್ಕೆ ನಾಡ ಬಂದೂಕಿನಿಂದ ಗುಂಡಿನ ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಓರ್ವ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫೈರಿಂಗ್ ಮಾಡುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ, ನವೆಂಬರ್ 29: ಕಿರಾಣಿ ಅಂಗಡಿಯ ಬಾಕಿ ಹಣ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ. ಅವರಗೋಳ ಗ್ರಾಮದ ಆಸ್ಕರ್ ಕಿಲ್ಲೇದಾರ ಎಂಬಾತ ಮೆಹಬೂಬ್ ಮುನ್ನೋಳಿ ಎಂಬುವವರ ಮೇಲೆ ಸಿಂಗಲ್ ಬ್ಯಾರೆಲ್ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.